ವಿದ್ಯಾರ್ಥಿಗಳ ಪ್ರತಿಭಟನೆಗೆ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಾಜೀನಾಮೆ!
ಢಾಕಾ: ವಿದ್ಯಾರ್ಥಿಗಳ ಪ್ರತಿಭಟನೆ ಬೆನ್ನಲ್ಲೇ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಒಬೈದುಲ್ ಹಸನ್ ಅವರು ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಷ್ಠಾವಂತರಾಗಿದ್ದರು. ಈ ಹಿನ್ನೆಲೆಯಲ್ಲಿ ಢಾಕಾದ ನ್ಯಾಯಾಲಯದ ಹೊರಗೆ ಜಮಾಯಿಸಿದ್ದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಒಬೈದುಲ್ ಹಸನ್ ರಾಜೀನಾಮೆ ನೀಡಲು ಒಂದು ಗಂಟೆ ಸಮಯಾವಕಾಶ ನೀಡಿದ್ದರು.
ಬಾಂಗ್ಲಾದೇಶ ಬ್ಯಾಂಕ್ ಗವರ್ನರ್ ಅಬ್ದುರ್ ರೂಫ್ ತಾಲೂಕ್ದರ್ ರಾಜೀನಾಮೆ ನೀಡಿದ ಒಂದು ದಿನದ ಬಳಿಕ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಅರಾಜಕತೆ ಮೂಡಿರುವ ಬಾಂಗ್ಲಾದೇಶದಲ್ಲಿ ಈಚೆಗೆ ಪ್ರತಿಭಟನಾಕಾರರು ಸೆಂಟ್ರಲ್ ಬ್ಯಾಂಕ್‌ನ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕಿದ್ದರು. ಘಟನೆ ಬೆನ್ನಲ್ಲೇ ಅಬ್ದುರ್ ರೂಫ್ ತಾಲೂಕ್ದರ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಈಚೆಗೆ ಮೀಸಲಾತಿ ನೀತಿ ವಿರೋಧಿಸಿ ದೇಶದಾದ್ಯಂತ ನಡೆದ ಹಿಂಸಾಚಾರದ ಬೆನ್ನಲ್ಲೇ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶೇಖ್ ಹಸೀನಾ ಅವರು ದೇಶ ತೊರೆದಿದ್ದರು. ಬಳಿಕ ಮೊಹಮ್ಮದ್ ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಅಧಿಕಾರ ವಹಿಸಿದ್ದರು.
Post a comment
Log in to write reviews