ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂದಗಂಗಾ, ವೇದಗಂಗಾ, ಘಟಪ್ರಭಾ ನದಿ ಉಕ್ಕಿ ಹರಿತ್ತಿದ್ದು ನದಿ ಪಾತ್ರದ ಜನರು ತತ್ತರಿಸಿ ಹೋಗಿದ್ದಾರೆ.
ಘಟಪ್ರಭಾ ನದಿ ಪ್ರವಾಹದಿಂದ ಗೋಕಾಕ್ ನಗರದ ಬಳಿಯಿರುವ ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ಮುಳುಗಡೆಯಾಗಿದೆ. ಇದರಿಂದ ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಲೋಳಸೂರ ಸೇತುವೆ ಮೇಲೆ ನದಿ ನೀರು ರಭಸವಾಗಿ ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಸೇತುವೆಯ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.
ಪ್ರವಾಹದಿಂದ ಶುಕ್ರವಾರ ಒಂದೇ ದಿನ ಬೆಳಗಾವಿ ಜಿಲ್ಲೆಯ 6 ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಈವರೆಗೆ ಒಟ್ಟು 36 ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿ ಪಾತ್ರದ ಸುಮಾರು 232 ಗ್ರಾಮಗಳಲ್ಲಿ ಪ್ರವಾಹದ ಆತಂಕ ಶುರುವಾಗಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 25 ಮಿ.ಮೀ ದಾಖಲೆಯ ಮಳೆಯಾಗಿದೆ. 427 ಕಡೆ ಕಾಳಜಿ ಕೇಂದ್ರ ಗುರುತಿಸಲಾಗಿದೆ. ಜಿಲ್ಲಾಡಳಿತ ಈಗಾಗಲೆ ಐದು ಕಡೆಗಳಲ್ಲಿ ಕಾಳಜಿ ಕೇಂದ್ರ ತೆರೆದಿದೆ. ಕಾಳಜಿ ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ಜನರಿಗೆ ಆಶ್ರಯ ವ್ಯವಸ್ಥೆ ಮಾಡಲಾಗಿದೆ.
ಪ್ರವಾಹ ಪರಿಸ್ಥಿತಿ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸಿದ್ಧವಿದೆ. ಈಗಾಗಲೇ 427 ಕಡೆ ಕಾಳಜಿ ಕೇಂದ್ರ ತೆರೆಯಲು ಸ್ಥಳ ಗುರುತು ಮಾಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಗಿರುವ ಲೋಪದೋಷ ಸರಿಪಡಿಸುತ್ತೇವೆ. ಸಂತ್ರಸ್ತರಿಗೆ ಉತ್ತಮ ಆಹಾರ ನೀಡಲು ಕ್ರಮಕೈಗೊಳ್ಳಲಾಗುವುದು. ಇಂದಿನಿಂದ ಕಾಳಜಿ ಕೇಂದ್ರಗಳಲ್ಲಿ ಬ್ಲ್ಯಾಂಕೆಟ್ ನೀಡಲಾಗುವುದು. ಸಂತ್ರಸ್ತರಿಗೆ ಯಾವುದೇ ಸಮಸ್ಯೆ ಆಗದಂತೆ ಕಾಳಜಿವಹಿಸಲಾಗುತ್ತೆ. ಮಹಾರಾಷ್ಟ್ರದ ಎರಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇದೆ. ನಾರಾಯಣಪುರ ಜಲಾಶಯದ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಹೇಳಿದರು.
Post a comment
Log in to write reviews