ಚನ್ನಪಟ್ಟಣ ಉಪಚುನಾವಣೆ: ಸಿಪಿ ಯೋಗೇಶ್ವರ್, ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್ ಟಿಕೆಟ್
ಬೆಂಗಳೂರು: ರಾಜ್ಯದಲ್ಲಿ ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, ಬುಧವಾರ ಮಹತ್ವದ ಬೆಳವಣಿಗೆಯಾಗಿದೆ. ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯಾರ್ಥಿಗಳನ್ನು ಘೋಷಿಸಿದೆ. ಮಾಜಿ ಸಚಿವ ಹಾಗೂ ಐದು ಬಾರಿ ಶಾಸಕರಾಗಿದ್ದ ಸಿಪಿ ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಸಂಜೆಯ ವೇಳೆಗೆ, ಎಐಸಿಸಿ ಚನ್ನಪಟ್ಟಣದಿಂದ ಅವರ ಉಮೇದುವಾರಿಕೆಯನ್ನು ಘೋಷಿಸಿದೆ. ಮತ್ತೊಂದೆಡೆ, ಬಳ್ಳಾರಿಯ ಸಂಸದ ಇ. ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರು ಸಂಡೂರು (ಎಸ್‌ಟಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಘೋಷಣೆ ಮಾಡಲಾಗಿದೆ.
ಚನ್ನಪಟ್ಟಣಕ್ಕೆ ಸಿ.ಪಿ.ಯೋಗೇಶ್ವರ್ ಹಾಗೂ ಸಂಡೂರಿಗೆ ಈ. ಅನ್ನಪೂರ್ಣ ಅವರನ್ನು ಆಯ್ಕೆಮಾಡಲಾಗಿದ್ದು, ಅನ್ನಪೂರ್ಣ ಅವರು ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸುತ್ತಿದ್ದಾರೆ. ಯೋಗೇಶ್ವರ್ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಲು ಸ್ಪರ್ಧಿಸಿದ್ದಾರೆ. ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ, ಹೈಕಮಾಂಡ್ ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯಾರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಈ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಮತ್ತು ಮುಸ್ಲಿಂ ಮುಖಂಡರು ಆಯಾ ಸಮುದಾಯಕ್ಕೆ ಸೇರಿದ ಅಭ್ಯಾರ್ಥಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದು ಆಯ್ಕೆ ಕಗ್ಗಂಟಾಗಿದೆ. ಇಂದು ಅಭ್ಯಾರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ.
ಶಿಗ್ಗಾಂವಿ, ಸಂಡೂರು, ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತುಕಾರಾಂ ಮತ್ತು ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರಿಂದ ತೆರವಾದ ಕ್ಷೇತ್ರಗಳಾಗಿವೆ. ನವೆಂಬರ್ 13 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಿಪಿವೈ ಆಶೀರ್ವಾದ ಪಡೆದುಕೊಂಡರು. ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರಿದರು. ಸಿಪಿವೈಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಬರಮಾಡಿಕೊಂಡರು.
Post a comment
Log in to write reviews