ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ, ವಾಪಸ್ ಬಾ.. ದೇಶ ಬಿಟ್ಟು ಹೋದ ಪ್ರಜ್ವಲ್ ಗೆ ದೇವೇಗೌಡರು ಖಡಕ್ ಎಚ್ಚರಿಕೆ.!
ಬೆಂಗಳೂರು: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ತಾಕೀತು ಮಾಡಿದ್ದಾರೆ. ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಎಂದು ಪ್ರಜ್ವಲ್ ಗೆ ತಾಕೀತು ಮಾಡಿದ್ದಲ್ಲದೆ, ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ. ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ. ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಎಂದೂ ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೇ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.
Post a comment
Log in to write reviews