ಬೆಂಗಳೂರು: ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಚಾಲನೆ ನೀಡಿದರು. ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಿದ್ದು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೇ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ. ಇಂದು ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಹಾಗೂ ರಾಜ್ಯಾದ್ಯಂತ 500 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.
ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು.
Post a comment
Log in to write reviews