ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಎರಡು ಕಡೆ ಮೇಘಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಭಾರೀ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ರಸ್ತೆಗಳು ಕೊಚ್ಚಿಹೋಗಿವೆ. ಎರಡು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಸಚಿವಾಲಯದಲ್ಲಿ ತುರ್ತು ಸಭೆ ಕರೆದಿದ್ದಾರೆ.
ಶಿಮ್ಲಾ ಜಿಲ್ಲೆಯ ರಾಮ್‌ಪುರ ಉಪವಿಭಾಗದ ಸಮಗ್ ಖುದ್‌ನಲ್ಲಿ ಒಂದು ಮೇಘಸ್ಫೋಟ ಉಂಟಾಗಿದೆ. ಇಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 28 ಮಂದಿ ನಾಪತ್ತೆಯಾಗಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ಹೇಳಿದ್ದಾರೆ.
ಜಿಲ್ಲಾಧಿಕಾರಿ ಅನುಪಮ್ ಕಶ್ಯಪ್ ಮಾತನಾಡಿ, ಬುಧವಾರ-ಗುರುವಾರ ಮಧ್ಯರಾತ್ರಿ 1 ಗಂಟೆಗೆ ಈ ಮೇಘಸ್ಫೋಟವು ಸಂಭವಿಸಿದೆ. ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದ್ದಾಗಿದೆ ಎಂದು ವಿವರಿಸಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಭಾರೀ ಮಳೆ ಮತ್ತು ಮೇಘಸ್ಫೋಟದಿಂದಾಗಿ ಭಾರಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಮಾಹಿತಿ ನೀಡಿದ್ದಾರೆ.
ನಾಪತ್ತೆಯಾದವರ ಪತ್ತೆಗೆ ಡ್ರೋನ್ ಬಳಕೆ:
ಪೀಡಿತ ಪ್ರದೇಶಗಳಲ್ಲಿ ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗಿದೆ. ನಾಲ್ಕು ಮೋಟಾರು ಸೇತುವೆಗಳು ಮತ್ತು ಕಾಲು ಸೇತುವೆಗಳು ಕೊಚ್ಚಿಹೋಗಿವೆ. ಸೇಬು ಬೆಳೆ ಕೂಡ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಭರದಿಂದ ಸಾಗುತ್ತಿವೆ. ಡಿಸಿ ಮತ್ತು ಎಸ್ಪಿ ಸ್ಥಳದಲ್ಲೇ ಇದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹ ರಕ್ಷಕರ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳ ಸಹಾಯ ತೆಗೆದುಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
Post a comment
Log in to write reviews