ಮಂಗಳೂರು : ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಕಳ್ಳಸಾಗಣೆ ಮತ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದು, 42ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರಿಗೆ ಬೆಂಗಳೂರಿನಿಂದ ಮಂಗಳೂರಿಗೆ ಹೊಸ ಮಾರುತಿ ಬಲೆನೊ ಕಾರಿನಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಎಂಡಿಎಂಎ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ಸುರತ್ಕಲ್‌ನ ಎನ್‌ಐಟಿಕೆ ಮುಕ್ಕಾ ಪ್ರದೇಶದ ಬಳಿ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದು, ಶಂಕಿತ ಆರೋಪಿಗಳು ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು ಎನ್ನಲಾಗಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಕಳನಾಡ್‌ನ ಚಂದ್ರಗಿರಿ ಪೋಸ್ಟ್‌ನ ಕೆಯೂರ್ ನಿವಾಸಿ ಶಾಜಹಾನ್ ಪಿ ಎಂ 32 ಕೇರಳದ ಕಾಸರಗೋಡು ಜಿಲ್ಲೆ ದೇಲಂಪಾಡಿ ಪೋಸ್ಟ್ ಆದೂರು ದೇವರಡ್ಕ ಮನೆ ನಿವಾಸಿ ಮೊಹಮ್ಮದ್ ನಿಶಾದ್ (28). ಕೋರಮಂಗಲ, ಬೆಂಗಳೂರು ನಿವಾಸಿ ಮನ್ಸೂರ್ ಎಂ ಎಂ (27), ಬಂಧಿತ ಆರೋಪಿಗಳಾಗಿದ್ದಾರೆ.
ಇವರಿಂದ 2,10,000 ಮೌಲ್ಯದ 24 ಗ್ರಾಂ ಎಂಡಿಎಂಎ, 5 ಮೊಬೈಲ್ ಫೋನ್‌ಗಳು, ಹೊಸ ಮಾರುತಿ ಬಲೆನೊ ಕಾರು ಮತ್ತು ಡಿಜಿಟಲ್ ತೂಕದ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 12,18,500 ರೂಪಾಯಿ ಎಂದು ಅಂದಾಜಿಸಲಾಗಿದೆ. ಸೇನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕಿತ ಆರೋಪಿಗಳು ಕರ್ನಾಟಕ ಮತ್ತು ಕೇರಳದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಲು ಹೊಸ ಕಾರನ್ನು ಬಾಡಿಗೆಗೆ ಪಡೆದಿದ್ದರು. ಮಾದಕ ದ್ರವ್ಯ ಕಳ್ಳಸಾಗಣೆ ಜಾಲದಲ್ಲಿ ಹೆಚ್ಚಿನ ವ್ಯಕ್ತಿಗಳು ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ. ಆರೋಪಿಗಳು ಐಷಾರಾಮಿ ಜೀವನಶೈಲಿಗಾಗಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದರು ಎಂದು ವರದಿಯಾಗಿದೆ.
ಬಂಧಿತರ ಪೈಕಿ ಶಾಜಹಾನ್ ವಿರುದ್ಧ ಈ ಹಿಂದೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬ, ಬೇಕಲ, ವಿದ್ಯಾನಗರ, ಕುಂಬಳೆ, ಕಾಸರಗೋಡು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಸೇವನೆಗೆ ಸಂಬಂಧಿಸಿದಂತೆ ಏಳು ಪ್ರಕರಣಗಳು ದಾಖಲಾಗಿವೆ. ಮೊಹಮ್ಮದ್ ನಿಶಾದ್ ವಿರುದ್ಧ ಪುತ್ತೂರು ಟೌನ್ ಮತ್ತು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರವಾಹನ ಸೇರಿದಂತೆ ಎರಡು ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯಕ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ನರೇಂದ್ರ ಮತ್ತು ಇತರ ಸಿಸಿಬಿ ಸಿಬ್ಬಂದಿಗಳ ನೇತೃತ್ವದಲ್ಲಿ ಈ ಮಾದಕ ದ್ರವ್ಯ ಕಳ್ಳಸಾಗಣೆ ಜಾಲವನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ನಡೆದಿದೆ.
Post a comment
Log in to write reviews