ಮತ್ತೆ ಆರ್ಭಟಿಸಲಿರುವ ಮುಂಗಾರು! ಹವಾಮಾನ ಇಲಾಖೆಯಿಂದ ಎಚ್ಚರಿಕೆಯ ಮುನ್ಸೂಚನೆ
ನವದೆಹಲಿ: ದೇಶಾದ್ಯಂತ ಮಳೆ ಅಬ್ಬರ ಹೆಚ್ಚುತ್ತಿದ್ದು ಕೆಲವೆಡೆ ದಿನದಿಂದ ದಿನಕ್ಕೆ ಮಳೆ ಆರ್ಭಟ ತುಸು ಕಡಿಮೆಯಾಗುತ್ತಿದೆ. ಕೇರಳ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಆರ್ಭಟ ಜನರನ್ನು ಭಯಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಯಾವ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಅನ್ನೋದರ ವಿವರ ಇಲ್ಲಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ಮಧ್ಯಂತರವಾಗಿ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಇದೇ ರೀತಿಯ ಮಳೆಯಾಗುವ ಸಾಧ್ಯತೆ ಇದೆ. ತೇವಭರಿತ ಪೂರ್ವ ಮಾರುತಗಳು ರಾಷ್ಟ್ರ ರಾಜಧಾನಿಯಲ್ಲಿ ಮತ್ತು ಅದರ ಸುತ್ತಲೂ ಪ್ರಬಲವಾಗಿದೆ, ಹಾಗಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಗಾರು ಮಳೆಯ ಪ್ರಭಾವದಿಂದ ಉತ್ತರ ಭಾರತದಲ್ಲಿ ಅದರಲ್ಲೂ ಗುಡ್ಡಗಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವುದು ಗಮನಿಸಬೇಕಾದ ಸಂಗತಿ. ಮೋಡ ಕವಿದ ಕಾರಣ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ದೆಹಲಿಯ ಕೆಲವೆಡೆ ಮಧ್ಯಾಹ್ನ 12 ಗಂಟೆಯಿಂದ ಸಂಜೆಯವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಉತ್ತರ ಗುಜರಾತ್ ಮತ್ತು ದಕ್ಷಣ ರಾಜಸ್ಥಾನದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಮಧ್ಯ ಮಹಾರಾಷ್ಟ್ರ, ಉತ್ತರ ಕೊಂಕಣ ಮತ್ತು ಗೋವಾ ಮತ್ತು ದಕ್ಷಿಣ ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಈಶಾನ್ಯ, ಪಶ್ಚಿಮ ಗುಜರಾತ್, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ರಾಜಸ್ಥಾನ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್, ಹರಿಯಾಣ, ಮತ್ತು ದೆಹಲಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ನೀಡಿದೆ.
ಕರ್ನಾಟಕ ರಾಜ್ಯದಲ್ಲಿ ಮತ್ತೆ ಮುಂಗಾರು ಸಕ್ರಿಯವಾಗಲಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
Post a comment
Log in to write reviews