ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ
ಬೆಂಗಳೂರು :ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ.
ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.
ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ
ಕಾಂಗ್ರೆಸ್ ನಾಯಕರಿಂದ ವಾಗ್ದಾಳಿ
ಮತ್ತೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ, ಯಾವ ರೀತಿಯಲ್ಲಿ ಗವರ್ನರ್ ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇತ್ತು. ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ. ಈ ಬಗ್ಗೆ ನಾವು ರಾಜ್ಯಪಾಲರಿಗೆ ಉತ್ತರ ಕೊಟ್ಟಿದ್ದೆವು. ನಾವು ಶೋಕಾಸ್ ನೋಟಿಸ್ಗೆ ಎಳೆ ಎಳೆಯಾಗಿ ಉತ್ತರ ಕೊಟ್ಟಿದ್ದೆವು. ಆದರೂ ಸಿಎಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದು ಆರೋಪಿಸಿದ್ದಾರೆ.
Post a comment
Log in to write reviews