ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ
ಬೆಂಗಳೂರು: ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
2023ರ ಡಿಸೆಂಬರ್ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಂದು ಗಂಡ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಸಾರ್ವಜನಿಕ ವೇದಿಕೆಯಲ್ಲಿ ಹೇಳಿದ್ದರು.
ಈ ಹಿನ್ನೆಲೆ ಮಹಿಳೆಯರ ಬಗ್ಗೆ ಅಸಹ್ಯವಾಗಿ ಮಾತನಾಡಿ ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ ಅವರು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಡಿಸೆಂಬರ್ 26ರಂದು ದೂರು ನೀಡಿದ್ದರು. “ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ-1860ರ ಕಲಂ 354, 294, 509, 506, 153ಎ, 295, 295ಎ ಹಾಗೂ 298ರ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು.
ದೂರಿನನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕಲ್ಲಡ್ಕ ಪ್ರಭಾಕರ್ ಭಟ್ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಭಾಕರ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.
Post a comment
Log in to write reviews