ವಿಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ತಿಳಿದಿದ್ದರೆ ಅದು ತಮ್ಮ ಭ್ರಮೆ. ನಿಮ್ಮ ಭ್ರಮಾಲೋಕ ವಾಸ ಮುಂದುವರೆಯಲಿ, ಆಲ್ ದಿ ಬೆಸ್ಟ್! ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
ಏಪ್ರಿಲ್ ವೇಳೆಗೆ 1400 ಎಲೆಕ್ಟ್ರಿಕ್ ಹೊಸ ಬಸ್ ಬಿಎಂಟಿಸಿಗೆ ಸೇರ್ಪಡೆಯಾಗಲಿದೆ ಎಂಬ ಹಿಂದಿನ ಸಿಎಂ ಟ್ವೀಟ್ ಅನ್ನು ಉಲ್ಲೇಖಿಸಿರುವ ಆರ್.ಅಶೋಕ್, ತಾವಿನ್ನೂ ಸಿಎಂ ಸ್ಥಾನದಲ್ಲಿ ಕುಳಿತಿದ್ದೀರಿ ಎಂಬುದುನ್ನು ತೋರಿಸುವ ಅನಿವಾರ್ಯತೆ ಸೃಷ್ಟಿಯಾಗಿರುವುದು ದುರಂತ ಎಂದು ಕಾಲೆಳೆದಿದ್ದಾರೆ.
ಅಲ್ಲದೆ, ನಿಮ್ಮಂತೆ ಅಹಂಕಾರದ ಮಾತುಗಳು ನನಗೆ ಬರುವುದಿಲ್ಲ. ಜೂನ್ 4ರ ನಂತರ ಯಾರು ಯಾರಿಗೆ ದೊಣ್ಣೆ ಕೊಟ್ಟು ಹೊಡಿಸಿಕೊಳ್ಳುತ್ತಾರೆ ಹಾಗೂ ಬಡಿಗೆಯಿಂದ ಹೊಡೆದು ಯಾರು ಯಾರನ್ನು ಕುರ್ಚಿಯಿಂದ ಕೆಳಗಿಳಿಸುತ್ತಾರೆ ನೋಡೋಣ ಎಂದಿದ್ದಾರೆ. ಅಲ್ಲದೆ ತಾವು ಅಪರೂಪಕ್ಕೆ ತಮ್ಮ ಗಾಢ ನಿದ್ದೆಯಿಂದ ಎದ್ದು ನನ್ನ ಒಂದು ಟೀಕೆಗೆ ಉತ್ತರ ನೀಡುವ ಶ್ರಮ ತೆಗೆದುಕೊಂಡಿದ್ದಕ್ಕೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರಲ್ಲದೆ, ಮೈಯೆಲ್ಲಾ ಎಣ್ಣೆ ಸವರಿಕೊಂಡಿರುವಂತೆ ತಮ್ಮ ಕರ್ತವ್ಯದಿಂದ ಜಾರಿಕೊಂಡು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ತಮ್ಮ ಭಂಡತನ ಎಂದಿದ್ದಾರೆ.
ಪತ್ರಿಕೆಗಳಲ್ಲಿ ಕೋಟಿ ಖರ್ಚು ಮಾಡಿ ಪುಟಗಟ್ಟಲೆ ಜಾಹೀರಾತು ಕೊಡುವುದೇ ನಿಮ್ಮ ಯೋಜನೆ. ಹಸಿರು ಬಾವುಟ ತೋರಿಸಿ ಬಸ್ಸಿಗೆ ಚಾಲನೆ ನೀಡುವಾಗ ಅದು ತಮ್ಮ ಸರ್ಕಾರದ ಕೊಡುಗೆ. ಆದರೆ ಅದರಲ್ಲಿ ನ್ಯೂನತೆಗಳು ಕಂಡು ಬಂದರೆ ಅದು ಕೇಂದ್ರ ಸರ್ಕಾರದ ಹೊಣೆ. ಇದು ಯಾವ ಸೀಮೆ ಆಡಳಿತ ಸ್ವಾಮಿ ಎಂದು ಪ್ರಶ್ನಿಸಿದ್ದು, ತಮಗೆ ಕರ್ನಾಟಕದ ಜನತೆ ಅಧಿಕಾರ ಕೊಟ್ಟಿರುವುದು ಎಲ್ಲದಕ್ಕೂ ಕೇಂದ್ರ ಸರ್ಕಾರ ದೂಷಿಸುತ್ತಾ ಕೈಚೆಲ್ಲಿ ಕುಳಿತುಕೊಳ್ಳಲಿ ಅಂತ ಅಲ್ಲ ಎಂದಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಸಿಗಬೇಕು ಎನ್ನುವ ಬದ್ಧತೆ ಇದ್ದಿದ್ದರೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವರಿಕೆ ಮಾಡಿಕೊಡಿ. ಎಲ್ಲದಕ್ಕೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ತಾವು, ಎಲ್ಲದಕ್ಕೂ ಕೇಂದ್ರ ಮಂತ್ರಿಗಳಿಗೆ ಮನವಿ ಪತ್ರ ಕೊಡುವ ತಾವು ಇದಕ್ಕೆ ಮಾತ್ರ ಯಾಕೆ ಮಾಡಲಿಲ್ಲ. ಅಸಲಿಗೆ ನಾನು ಈ ವಿಷಯ ಪ್ರಸ್ತಾಪ ಮಾಡುವವರೆಗೂ ನಿಮಗೆ ಈ ವಿಷಯ ಗೊತ್ತೇ ಇರಲಿಲ್ಲ. ಇದು ನಿಮ್ಮ ಆಡಳಿತ ವೈಖರಿ ಎಂದು ಆಶೋಕ್ ವ್ಯಂಗ್ಯವಾಡಿದ್ದಾರೆ.
Post a comment
Log in to write reviews