ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣ ಚರ್ಚೆಗೆ ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ
ನವದೆಹಲಿ: ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣದ ನೆರವು ಮತ್ತಿತರ ವಿಷಯಗಳ ಕುರಿತು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿಮಾಡಿ ಚರ್ಚಿಸಿದರು.
ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತು ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.
ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಗೃಹ ಸಚಿವರನ್ನು ಕೋರಿದ್ದಾರೆ.
ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಐಆರ್‌ಬಿ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು. ಹೈಕೋರ್ಟ್‌ನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ ಬೇಬಿ ವಾರ್ನ ಕ್ಯಾಮೆರಾ ಕಡ್ಡಾಯ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 ಬೇಬಿ ವಾರ್ನ ಕ್ಯಾಮೆರಾ ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ ಹಾಗೂ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್ ಶಾ ಅವರನ್ನು ಕೋರಿದ್ದಾರೆ. ಪೊಲೀಸ್ ಕ್ಯಾಂಟೀನ್ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಅಮಿತ್ ಶಾ ಹಾಗೂ ಸಿದ್ದರಾಮಯ್ಯ ಚರ್ಚಿಸಿದ್ದಾರೆ.
Post a comment
Log in to write reviews