ಉತ್ತರಾಖಂಡ: ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು 30 ಮಂದಿ ಮೃತಪಟ್ಟಿದ್ದಾರೆ. ಹರಿದ್ವಾರ ಜಿಲ್ಲೆಯ ಲಾಲ್ಧಾಂಗ್ನಿಂದ ಪೌರಿಯ ಬಿರೋನ್ಖಾಲ್ಗೆ ಪ್ರಯಾಣಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬಸ್ಸಿನಲ್ಲಿ 50-55 ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಂಭವವಿದೆ ಎಂದು ಮೃತದೇಹಗಳನ್ನು ಹೊರತೆಗೆಯುತ್ತಿರುವ ಅಧಿಕಾರಿಗಳು ಹೇಳಿದ್ದಾರೆ. ಸ್ಥಳೀಯ ಶಾಸಕಿ ರಿತು ಖಂಡೂರಿ ಸ್ಥಳಕ್ಕೆ ಆಗಮಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದರು. ಅಪಘಾತದ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು ಎನ್ನಲಾಗಿದೆ.
Post a comment
Log in to write reviews