ಬೆಂಗಳೂರು: ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಟ ಮಟ ಮಧ್ಯಾಹ್ನ ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿ ನಡೆದಿದೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ನಾಗೇಶ್ ಕೊಂಡ ಎಂಬ ಯುವಕನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದ್ದು, ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನಲಾಗಿದೆ.
ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆ್ಯಸಿಡ್ ದಾಳಿಯಲ್ಲಿ ಇದು 2ನೇ ದಾಳಿಯಾಗಿದೆ. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿದ್ದು, ಇಡೀ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು. ಆರೋಪಿಯನ್ನು ಬಂಧಿಸುವಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದರು. ಈಗ ಇದೇ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ. ಸದ್ಯ ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Post a comment
Log in to write reviews