ಭಾರತದಲ್ಲಿ 5 ಕೋಟಿಗೂ ಹೆಚ್ಚು ಮಾದಕ ವ್ಯಸನಿಗಳಿದ್ದಾರೆ : ಡಾ.ಜಿ.ಪರಮೇಶ್ವರ್
ಬೆಂಗಳೂರು : ದೇಶದಲ್ಲಿ 5 ಕೋಟಿಗೂ ಹೆಚ್ಚು ಜನರು ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳು ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದೆ. ಇದು ಯುವಕರನ್ನು ಹಾಳು ಮಾಡುತ್ತಿದೆ. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂ.26ರಂದು ಆಚರಿಸಲು ನಿರ್ಣಯಿಸಿತು. ಮಾದಕ ದ್ರವ್ಯ ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು.
ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕಿಕೊಳ್ಳುತ್ತಿದೆ, ಸಧ್ಯಕ್ಕೆ 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು.
ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೇ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ್ಮ ಮಕ್ಕಳ ಚಟುವಟಿಕೆಗಳ ಮೇಲೆ ಗಮನವಹಿಸಬೇಕು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಶ್ರಮ ಪಡುತ್ತಿದೆ 40 ಕೋಟಿ ರೂ. ಮೌಲ್ಯದ ಡ್ರಗ್ಸಸ್ ನಾಶಪಡಿಸಲಾಗಿದ್ದು, 10 ಟನ್ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್‌ಸ್ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವು ಎಂದು ಆತಂಕ ವ್ಯಕ್ತಪಡಿಸಿದರು.
ಡ್ರಗ್ಸ್‌ನಿಂದ ದೂರ ಇರುತ್ತೇವೆ ಎಂದು ಪ್ರತಿಯೊಬ್ಬರೂ ಸಂಕಲ್ಪ ಮಾಡಿಕೊಳ್ಳಬೇಕು. ಐಟಿ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು.
Post a comment
Log in to write reviews