ಬೆಂಗಳೂರು: ಮಳೆ ಹಾನಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರೆ ಸಾಲದು. ಬದಲಾಗಿ ಅವರು ಸೇನೆಯನ್ನು ಅಲ್ಲಿಗೆ ಕರಿಸಿಕೊಳ್ಳಬೇಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ತೀರುಗೇಟು ಕೊಟ್ಟಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯ ಮುಂದೆ ಮಾಧ್ಯಮಗಳ ಜೊತೆ ಮಾತನಾಡ ಶಿವಕುಮಾರ್ ಅವರು ಅಂಕೋಲಾ ಸೇರಿದಂತೆ ಇತರ ಕಡೆಗಳಿಗೆ ಕುಮಾರಸ್ವಾಮಿ ಭೇಟಿ ನೀಡಿದ್ದು, ಅವರು ಯಾವ ಫೀಲ್ಡಿಗೆ ಇಳಿದಿದ್ದಾರೆ? ಅವರು ಸಿಆರ್ ಪಿಎಫ್ ಪಡೆ ಕರೆಸಿ, ತೆರವು ಕಾರ್ಯಕ್ಕೆ ನೇರವಾಗಿದ್ದರೆ, ಫೀಲ್ಡಿಗೆ ಇಳಿದಿದ್ದಾರೆ ಎಂದು ಹೇಳಬಹುದಿತ್ತು. ಅನಾಹುತ ನಡೆದ ಒಂದೇ ತಾಸಿನಲ್ಲಿ ನಮ್ಮ ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ.
ನಮ್ಮ ಸಚಿವರಾದ ಕೃಷ್ಣ ಭೈರೇಗೌಡರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಈ ವಿಚಾರದಲ್ಲಿ ಈಗ ರಾಜಕಾರಣ ಮಾಡುವುದು ಬೇಡ. ಮೊದಲು ಜನರ ರಕ್ಷಣೆ ಮಾಡೋಣ ಎಂದರು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ. ಇನ್ನೆರಡು ಮೂರು ದಿನಗಳಲ್ಲಿ ಕೆಆರ್ ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜೊತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಭತ್ತ ನಾಟಿ ಮಾಡುವ ಮುನ್ನ ಸ್ವಲ್ಪ ತಾಳ್ಮೆ ವಹಿಸಬೇಕು. ನೀರು ಎಷ್ಟು ಪ್ರಮಾಣದಲ್ಲಿ ಬರಲಿದೆ ಎಂಬುದು ಇನ್ನು ತಿಳಿದಿಲ್ಲ. ಹೀಗಾಗಿ ಕೃಷಿ ಇಲಾಖೆಯವರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು.ಎಂದು ತಿಳಿಸಿದರು.
Post a comment
Log in to write reviews