ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು(ಶುಕ್ರವಾರವ 28 ಜೂನ್) ಭಾರಿ ಮಳೆಯಾಗುವ ಸೂಚನೆಯಿದ್ದು 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. 40ರಿಂದ 50 ಕಿ.ಮೀ. ವೇಗದಲ್ಲಿ ನಿರಂತರ ಗಾಳಿಯ ಜೊತೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹಾಗೂ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಹಾಸನ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಉದ್ದಕ್ಕೂ ಬಿರುಗಾಳಿಯ ಆರ್ಭಟ ಹೆಚ್ಚಿರುವ ಸಾಧ್ಯತೆಯಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಸಮುದ್ರದಲ್ಲಿ ಭಾರಿ ಅಲೆಗಳು ಕಾಣಿಸಿಕೊಳ್ಳಬಹುದು. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರ ವಹಿಸಬೇಕು. ಸಣ್ಣ ಹಡಗುಗಳು ಸಂಚರಿಸಬಾರದು. ಸಮುದ್ರದ ದಡದಲ್ಲಿ ಮನೋರಂಜನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು. ಅಲೆಗಳು ಉಲ್ಬಣಿಸುವ ಸಾಧ್ಯತೆ ಇರುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿ ಕಾಣಿಸಿಕೊಳ್ಳುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಜುಲೈ 1ರವರೆಗೂ ಗಾಳಿಯೊಂದಿಗೆ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
Post a comment
Log in to write reviews