ರಾಮನಗರ : 2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಅಂತರದಿಂದ ಗೆದ್ದು ಸಂಸದರಾಗಿ ಹೆಚ್‌ಡಿ ಕುಮಾರಸ್ವಾಮಿ ಅವರು ಆಯ್ಕೆಯಾದ ಬಳಿಕ ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ಹೊಸ ಚರ್ಚೆಯೊಂದು ಶುರುವಾಗಿದೆ.
ಚನ್ನಪಟ್ಟಣ ವಿಧಾನಸಭೆಗೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟ ಮುಂದುವರೆಯಲಿದ್ದು, ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಸ್ಪರ್ಧೆ ಮಾಡಲಿದ್ದಾರೆ. ಇನ್ನೊಂದೆಡೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಸೋಲುಂಡಿರುವ ಡಿಕೆ ಸುರೇಶ್, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.
ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಉತ್ತಮ ಫಲಿತಾಂಶ ನೀಡಿದ ಹಿನ್ನಲೆ ಚನ್ನಪಟ್ಟಣದಲ್ಲೂ ಮೈತ್ರಿ ಮುಂದುವರೆಯಲಿದೆ ಎನ್ನಲಾಗುತ್ತಿದೆ. ಹೀಗಾಗಿಯೇ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರು, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಈ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಯೋಗೀಶ್ವರ್ ಸೋತಿದ್ದರು. ನಂತರ ಡಿಕೆ ಸುರೇಶ್ ವಿರುದ್ಧ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಯೋಗೇಶ್ವರ್ ಆಸಕ್ತಿ ತೋರಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಹಿಂದೆ ಸರಿದ್ದರು. ಇದೀಗ ಚನ್ನಪಟ್ಟಣದಲ್ಲಿ ಟಿಕೆಟ್ ಪಡೆಯಲು ಯೋಗೇಶ್ವರ್ ಕಸರತ್ತು ಆರಂಭಿಸಿದ್ದಾರೆ. ಇನ್ನೊಂದೆಡೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿನ ಸೋಲನ್ನು ಡಿಕೆ ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ತಮ್ಮ ಡಿಕೆ ಸುರೇಶ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬಹುದು ಎಂಬ ಮಾತು ಕೇಳಿ ಬರುತ್ತಿದೆ. ಲೋಕಸಭೆ, ಪರಿಷತ್ನಲ್ಲಿ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟದ್ದರಿಂದ ಈ ಬಾರಿ ನನಗೆ ಟಿಕೆಟ್ ಸಿಗಬಹುದು ಎಂಬ ವಿಶ್ವಾಸದಲ್ಲಿ ಯೋಗೇಶ್ವರ್ ಇದ್ದಾರೆ.
Post a comment
Log in to write reviews